ಬೆಂಗಳೂರು: ನಗರದ ವೈಟ್‌ಫೀಲ್ಡ್‌ನ ಕಾಡುಗೋಡಿಯಲ್ಲಿ ಸ್ಥಾಪಿಸಲಾದ ಏರ್‌ಬಸ್ ಟೆಕ್ನಾಲಜಿ ಸೆಂಟರ್ ಅನ್ನು ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D. K. Shivakumar) ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವು ದೇಶದ ಪ್ರಮುಖ ತಂತ್ರಜ್ಞಾನ ಹಾಗೂ ಏರೋಸ್ಪೇಸ್ ಕೇಂದ್ರವಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ರಾಜ್ಯದಲ್ಲಿ ಜಾಗತಿಕ ಕಂಪನಿಗಳು ಹೂಡಿಕೆ ಮಾಡಲು ಮುಂದಾಗುತ್ತಿರುವುದು ಉದ್ಯೋಗ ಸೃಷ್ಟಿಗೆ ಹಾಗೂ ಕೈಗಾರಿಕಾ ಬೆಳವಣಿಗೆಗೆ ದೊಡ್ಡ ಉತ್ತೇಜನ ನೀಡಲಿದೆ. ಈ ರೀತಿಯ ತಂತ್ರಜ್ಞಾನ ಕೇಂದ್ರಗಳು ಯುವ ಪ್ರತಿಭೆಗಳಿಗೆ ಹೊಸ ಅವಕಾಶಗಳನ್ನು ಒದಗಿಸಲಿವೆ ಎಂದು ಅವರು ಹೇAಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು (Ram Mohan Naidu Kinjarapu) ಅವರು ಜೂಮ್ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಮಾತನಾಡಿದರು. ಭಾರತದಲ್ಲಿ ಏರೋಸ್ಪೇಸ್ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕವು ಈ ಕ್ಷೇತ್ರದ ಪ್ರಮುಖ ಹಬ್ ಆಗಿ ರೂಪುಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (M. B. Patil), ಏರ್‌ಬಸ್ ಇಂಡಿಯಾ ಮುಖ್ಯಸ್ಥ ಜುರ್ಗನ್ ವೆಸ್ಟರ್ ಮಿಯರ್ (Jurgen Westermeier) ಸೇರಿದಂತೆ ಕಂಪನಿಯ ಹಿರಿಯ ಅಧಿಕಾರಿಗಳು ಮತ್ತು ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಏರ್‌ಬಸ್ ಟೆಕ್ನಾಲಜಿ ಸೆಂಟರ್ ಸ್ಥಾಪನೆಯಿಂದ ಏರೋಸ್ಪೇಸ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ಸಿಗಲಿದ್ದು, ರಾಜ್ಯದ ತಂತ್ರಜ್ಞಾನ ವಲಯಕ್ಕೆ ಹೊಸ ಚೈತನ್ಯ ನೀಡಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.




