ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು: ಡಾ. ಕೆ. ಗೋವಿಂದರಾಜ್
ನ.14ರಿಂದ 21ರವರೆಗೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ; 27 ಕ್ರೀಡೆಗಳಲ್ಲಿ 5,000 ಕ್ರೀಡಾಪಟುಗಳು ಭಾಗಿ
ಬೆಂಗಳೂರು: ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವಂತಾಗಬೇಕು ಎಂಬುದು ನನ್ನ ಕನಸು. ಈ ಗುರಿ ಸಾಧನೆಗೆ ಯುವ ಕ್ರೀಡಾಪಟುಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ನೀಡುವುದು ಅಗತ್ಯ. ಈ ನಿಟ್ಟಿನಲ್ಲಿ ಮಿನಿ ಕರ್ನಾಟಕ ಕ್ರೀಡಾಕೂಟ ಮಹತ್ವದ ವೇದಿಕೆಯಾಗಲಿದೆ ಎಂದು ಫಿಬಾ ಏಷ್ಯಾ ಅಧ್ಯಕ್ಷರು, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್ ಹೇಳಿದರು.
ಕರ್ನಾಟಕ ಒಲಿಂಪಿಕ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ-2026 ಅನ್ನು ನವೆಂಬರ್ 14ರಿಂದ 21ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸೇರಿದಂತೆ ವಿವಿಧ ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಒಟ್ಟು 27 ಕ್ರೀಡೆಗಳ ಸ್ಪರ್ಧೆಗಳು ನಡೆಯಲಿದ್ದು, ಸುಮಾರು 5,000 ಯುವ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. 2020ರಲ್ಲಿ ಮೊದಲ ಬಾರಿಗೆ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. 14 ವರ್ಷ ವಯೋಮಾನದ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಹಾಗೂ ಸ್ಪರ್ಧಾತ್ಮಕ ಕ್ರೀಡಾ ವಾತಾವರಣಕ್ಕೆ ಹೊಂದಿಕೊಳ್ಳಲು ಈ ಕ್ರೀಡಾಕೂಟ ಉತ್ತಮ ಅವಕಾಶ ಕಲ್ಪಿಸಲಿದೆ ಎಂದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಇಂತಹ ಸ್ಪರ್ಧೆಗಳ ಮೂಲಕ ಅನುಭವ ನೀಡುವುದರಿಂದ ಭವಿಷ್ಯದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅವರನ್ನು ಸಿದ್ಧಪಡಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆರಂಭಿಸಲಾಗಿದೆ. ಬಾಲ್ಯದಲ್ಲಿಯೇ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಹಾಗೂ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ಇದು ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವುದರ ಜತೆಗೆ ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ದೇಶವನ್ನು ಪ್ರತಿನಿಧಿಸಬೇಕು ಎಂಬುದು ತಮ್ಮ ಆಶಯವಾಗಿದೆ. ಭವಿಷ್ಯದ ಕ್ರೀಡಾ ತಾರೆಯರನ್ನು ರೂಪಿಸುವಲ್ಲಿ ಈ ಕ್ರೀಡಾಕೂಟ ಪ್ರಮುಖ ಪಾತ್ರ ವಹಿಸಲಿದೆ ಎಂದು ಡಾ. ಗೋವಿಂದರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದಿಂದ ಕ್ರೀಡೆಗೆ ಪ್ರೋತ್ಸಾಹ
ರಾಜ್ಯ ಸರ್ಕಾರವು ಒಲಿಂಪಿಕ್ಸ್ ಗುರಿ ಯೋಜನೆ ಸೇರಿದಂತೆ ವಿವಿಧ ಉಪಕ್ರಮಗಳ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಒಲಿಂಪಿಕ್ಸ್‌ಗೆ ಸಿದ್ಧತೆ ನಡೆಸುವ ಕ್ರೀಡಾಪಟುಗಳಿಗೆ ₹10 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ನೆರವು ದೊರೆಯುವಂತೆ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
27 ಕ್ರೀಡೆಗಳಲ್ಲಿ ಸ್ಪರ್ಧೆ
ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಆರ್ಚರಿ, ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಕಯಾಕಿಂಗ್ ಮತ್ತು ಕೆನೋಯಿಂಗ್, ಗಾಲ್ಫ್, ಫುಟ್‌ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್‌ಬಾಲ್, ಹಾಕಿ, ಜೂಡೋ, ಖೋ-ಖೋ, ಕಬಡ್ಡಿ, ಲಾನ್ ಟೆನಿಸ್, ವಾಲಿಬಾಲ್, ನೆಟ್‌ಬಾಲ್, ಈಜು, ಟೇಬಲ್ ಟೆನಿಸ್, ಟೇಕ್ವಾಂಡೋ, ಇಕ್ವೆಸ್ಟ್ರಿಯನ್ (ಕುದುರೆ ಸವಾರಿ), ರೈಫಲ್ ಶೂಟಿಂಗ್, ಕುಸ್ತಿ, ವುಶು ಹಾಗೂ ವೇಟ್‌ಲಿಫ್ಟಿಂಗ್ ಸೇರಿದಂತೆ ಒಟ್ಟು 27 ಕ್ರೀಡೆಗಳ ಸ್ಪರ್ಧೆಗಳು ನಡೆಯಲಿವೆ.
ಕ್ರೀಡಾಕೂಟದ ವೆಬ್‌ಸೈಟ್ ಬಿಡುಗಡೆ
ಇದೇ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟದ ಅಧಿಕೃತ ವೆಬ್‌ಸೈಟ್ ಅನ್ನು ಬಿಡುಗಡೆ ಮಾಡಲಾಯಿತು.
ವೆಬ್‌ಸೈಟ್: https://5thministategames.com
ಸುದ್ದಿಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್ ಹಾಗೂ ರಾಜ್ಯದ ವಿವಿಧ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.