ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ; ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆ ಆಲಿಸಲು ಪ್ರತ್ಯೇಕ ಸಭೆ: ಸಿಎಂ
ಸಂವಿಧಾನದ ಆಶಯದಂತೆ ಎಲ್ಲ ಧರ್ಮಗಳಿಗೂ ಸಮಾನ ಗೌರವ, ರಕ್ಷಣೆ ನೀಡುವುದು ಸರ್ಕಾರದ ಬದ್ಧತೆ; ಉರ್ದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಭಾಷೆಯಲ್ಲ, ಅದು ಹೃದಯದ ಭಾಷೆ ಎಂದ ಸಿಎಂ
ಬೆಂಗಳೂರು: ಉರ್ದು ಅಕಾಡೆಮಿಯ ಚಟುವಟಿಕೆಗಳಿಗೆ ಹೆಚ್ಚಿನ ಅನುದಾನ ಒದಗಿಸುವುದರ ಜತೆಗೆ, ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಕರ್ನಾಟಕ ಉರ್ದು ಅಕಾಡೆಮಿ ವತಿಯಿಂದ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ, ಪುಸ್ತಕ ಬಿಡುಗಡೆ ಹಾಗೂ ‘ಜಷ್ನ್-ಎ-ಉರ್ದು’ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಸೇರಿದಂತೆ ವಿವಿಧ ಅಲ್ಪಸಂಖ್ಯಾತ ಸಮುದಾಯಗಳ ನಾಯಕರು ಹಾಗೂ ಶಾಸಕರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಾಸಕರ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನೂ ಆಲಿಸಲಾಗುವುದು ಎಂದು ತಿಳಿಸಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಹಾಗೂ ವಿವಿಧ ಸಂದರ್ಭಗಳಲ್ಲಿ ಸಮುದಾಯಗಳಿಗೆ ನೀಡಿರುವ ಮಾತುಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ, ಎಲ್ಲರ ಅಭಿಪ್ರಾಯಗಳಿಗೆ ಗೌರವ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಈ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಯೊಬ್ಬರಿಗೂ ದೊರೆಯಬೇಕಾದ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಲಾಗುವುದು ಎಂದು ಹೇಳಿದರು.
ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ ನೀಡುವ ಕುರಿತು ಈಗಾಗಲೇ ಸಚಿವರೊಂದಿಗೆ ಚರ್ಚಿಸಲಾಗಿದೆ. ಅಕಾಡೆಮಿಗೆ ಅಗತ್ಯವಿರುವ ಸೌಲಭ್ಯಗಳು ಮತ್ತು ಅನುದಾನದ ಬೇಡಿಕೆಗಳನ್ನು ಪರಿಶೀಲಿಸಿ ನೆರವು ಒದಗಿಸಲಾಗುವುದು. ಉರ್ದು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯಗಳ ಧ್ವನಿಯಾಗಿ ಸರ್ಕಾರವಿದೆ
ಕೆಲವರಿಗೆ ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ನಂಬಿಕೆ ಇಲ್ಲದಿರಬಹುದು. ಆದರೆ, ಇತರರಿಗೆ ನಂಬಿಕೆ ಇಲ್ಲ ಎಂಬ ಕಾರಣಕ್ಕೆ ಸಂಬಂಧಪಟ್ಟ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡಲು ಹಾಗೂ ಅವರ ಪರವಾಗಿ ಧ್ವನಿಯಾಗಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.
ನಮ್ಮ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿಯೇ ಆಡಳಿತ ನಡೆಸಲಿದೆ. ರಾಹುಲ್ ಗಾಂಧಿ ಸೇರಿದಂತೆ ನಾವೆಲ್ಲರೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡೇ ಪ್ರಮಾಣವಚನ ಸ್ವೀಕರಿಸಿದ್ದೇವೆ. ಸಂವಿಧಾನವನ್ನು ಉಳಿಸುವುದು, ಎಲ್ಲ ಜಾತಿ ಮತ್ತು ಧರ್ಮಗಳಿಗೆ ಸಮಾನ ಗೌರವ ಹಾಗೂ ರಕ್ಷಣೆ ನೀಡುವ ಮೂಲಕ ಅದರ ಆಶಯಗಳನ್ನು ಎತ್ತಿಹಿಡಿಯುವುದು ಸರ್ಕಾರದ ಬದ್ಧತೆಯಾಗಿದೆ ಎಂದರು.
ಉರ್ದು ಕೇವಲ ಒಂದು ಸಮುದಾಯದ ಭಾಷೆಯಲ್ಲ, ಅದು ಹೃದಯದ ಭಾಷೆ
ಉರ್ದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಭಾಷೆಯಲ್ಲ. ಅದು ಹೃದಯದ ಭಾಷೆ. ಸಾಹಿತ್ಯ, ಕಾವ್ಯ ಮತ್ತು ಶಾಯಿರಿ ಮೂಲಕ ಜನರ ಮನಸ್ಸನ್ನು ತಲುಪುವ ವಿಶಿಷ್ಟ ಶಕ್ತಿ ಈ ಭಾಷೆಗಿದೆ. ಇದಕ್ಕೆ ಯಾವುದೇ ಗಡಿಗಳಿಲ್ಲ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಉರ್ದು ಭಾಷೆ ಮತ್ತು ಸಂಸ್ಕೃತಿಯನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
ಮೈಸೂರು ದಸರಾ ಸಂದರ್ಭದಲ್ಲಿ ಆಯೋಜಿಸಿದ್ದ ಉರ್ದು ಶಾಯಿರಿ ಕಾರ್ಯಕ್ರಮದಲ್ಲಿ ಸುಮಾರು ಒಂದು ಗಂಟೆ ಕಾಲ ಕುಳಿತು ಕಾವ್ಯವನ್ನು ಆಲಿಸಿದ್ದೆ. ಆ ಕಾರ್ಯಕ್ರಮದ ಸಾಹಿತ್ಯಿಕ ಅಭಿವ್ಯಕ್ತಿ ಮನಸ್ಸಿಗೆ ಮುದ ನೀಡಿತ್ತು. ವಿಶೇಷವೆಂದರೆ, ಅಲ್ಲಿ ಮುಸ್ಲಿಮರು ಮಾತ್ರವಲ್ಲದೆ ಜೈನರು, ಬ್ರಾಹ್ಮಣರು, ಕನ್ನಡಿಗರು ಹಾಗೂ ಹಿಂದಿ ಮಾತನಾಡುವವರು ಸೇರಿದಂತೆ ವಿವಿಧ ಧರ್ಮ ಮತ್ತು ಭಾಷೆಗಳ ಜನರು ಭಾಗವಹಿಸಿದ್ದರು. ಎಲ್ಲರೂ ಉರ್ದು ಶಾಯಿರಿಯನ್ನು ಆಸಕ್ತಿಯಿಂದ ಆಲಿಸುತ್ತಿದ್ದರು. ಭಾಷೆ ಜನರನ್ನು ಬೆಸೆಯುವ ಶಕ್ತಿಯನ್ನು ಹೊಂದಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸ್ಮರಿಸಿದರು.
ಯಾವುದೇ ಭಾಷೆಯಲ್ಲಿದ್ದರೂ ಜ್ಞಾನಕ್ಕೆ ಗೌರವ ನೀಡಬೇಕು. ಇಂಗ್ಲಿಷ್ ಸೇರಿದಂತೆ ಯಾವುದೇ ಭಾಷೆಯನ್ನು ಅಗೌರವದಿಂದ ಕಾಣಬಾರದು. ಭಾಷೆ ಸಂವಹನದ ಮಾಧ್ಯಮವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಪ್ರೀತಿಸಿ ಗೌರವಿಸಬೇಕು. ತಾಯಿ ಮತ್ತು ತಾಯ್ನುಡಿಯ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಕತ್ತರಿಸುವ ಕೆಲಸ ಬೇಡ, ಸೂಜಿಯಂತೆ ಬೆಸೆಯುವ ಕೆಲಸ ಮಾಡೋಣ
ನಮ್ಮ ಭಾಷೆಗಳು ಬೇರೆ ಬೇರೆಯಾಗಿರಬಹುದು. ಆದರೆ, ಮನುಷ್ಯರ ಭಾವನೆಗಳು ಒಂದೇ. ಮಾನವೀಯತೆಯೇ ನಮ್ಮ ಜಾತಿ, ಮಾನವೀಯತೆಯೇ ನಮ್ಮ ಧರ್ಮ. ಕಬ್ಬಿಣದಿಂದ ಕತ್ತರಿ ಮತ್ತು ಸೂಜಿ ಎರಡನ್ನೂ ತಯಾರಿಸಬಹುದು. ಆದರೆ, ನಮಗೆ ಕತ್ತರಿಸುವ ಕೆಲಸ ಬೇಡ; ಸೂಜಿಯಂತೆ ಹೊಲಿದು ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಬೇಕು. ನಮ್ಮ ಸರ್ಕಾರ ಮತ್ತು ಪಕ್ಷ ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತವೆಯೇ ಹೊರತು ಒಡೆಯುವ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.
ಉರ್ದು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿರುವ 20 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತಸದ ಸಂಗತಿ. ಪ್ರಶಸ್ತಿ ಪುರಸ್ಕೃತ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಉರ್ದು ಸಾಹಿತ್ಯದ ಬೆಳವಣಿಗೆಗಾಗಿ ಅಕಾಡೆಮಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.