ದಲಿತ ವಿರೋಧಿ ನೀತಿಗಳ ವಿರುದ್ಧ ರಾಜ್ಯಾದ್ಯಂತ ಛಲವಾದಿ ಸಂಗಮ ಬಲವರ್ಧನೆಗೆ ಚಾಲನೆ
ಎಸ್‌ಸಿಎಸ್‌ಪಿ–ಟಿಎಸ್‌ಪಿ ಅನುದಾನ, ವಿದ್ಯಾರ್ಥಿ ವೇತನ, ಮೀಸಲಾತಿ ವರ್ಗೀಕರಣದ ಬಗ್ಗೆ ಅಸಮಾಧಾನ
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ
ಬೆಂಗಳೂರು: ನಾಡಿನ ಛಲವಾದಿ ಸಮುದಾಯದ ಸರ್ವತೋಮುಖ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ಜಾಗೃತಿಗಾಗಿ ಶ್ರಮಿಸುತ್ತಿರುವ ‘ರಾಜ್ಯ ಛಲವಾದಿ ಸಂಗಮ’ ಸಂಘಟನೆಯು ರಾಜ್ಯಾದ್ಯಂತ ತನ್ನ ಸಂಘಟನಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದೆ.
ಪ್ರಸ್ತುತ ಸರ್ಕಾರದ ಕೆಲವು ನೀತಿಗಳು ದಲಿತ ಹಾಗೂ ಛಲವಾದಿ ಸಮುದಾಯದ ಹಿತಾಸಕ್ತಿಗೆ ಧಕ್ಕೆ ತರುತ್ತಿವೆ ಎಂದು ಸಂಘಟನೆ ಕಳವಳ ವ್ಯಕ್ತಪಡಿಸಿದೆ. ವಿಶೇಷವಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಉಪಯೋಜನೆಯಡಿ ಅನುದಾನ ಹಂಚಿಕೆ, ವಿದ್ಯಾರ್ಥಿ ವೇತನ ಹಾಗೂ ಮೀಸಲಾತಿ ವರ್ಗೀಕರಣ ಸೇರಿದಂತೆ ಹಲವು ವಿಚಾರಗಳಲ್ಲಿ ದಲಿತ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದರು.
ಇದರ ಜೊತೆಗೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಶೋಷಣೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇತ್ತೀಚೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಉಲ್ಲೇಖಿಸಿದ ಮುಖಂಡರು, ಮಹಿಳೆಯರ ಸುರಕ್ಷತೆ ಮತ್ತು ನ್ಯಾಯದ ವಿಚಾರದಲ್ಲಿ ಸರ್ಕಾರ ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯಾದ್ಯಂತ ಸಂಘಟನೆ ಬಲವರ್ಧನೆ
ಈ ಎಲ್ಲ ಜ್ವಲಂತ ಸಮಸ್ಯೆಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಿಕ ಆಶಯಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯ ಛಲವಾದಿ ಸಂಗಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ಪುನರ್‌ರಚಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಾಜ್ಯ ಸಮಿತಿಯನ್ನೂ ಬಲಪಡಿಸಲಾಗುತ್ತಿದ್ದು, ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಸದಸ್ಯತ್ವ ನೋಂದಣಿ ಪ್ರಕ್ರಿಯೆಯನ್ನೂ ಆರಂಭಿಸಲಾಗುವುದು ಎಂದು ಮುಖಂಡರು ತಿಳಿಸಿದರು.
ಮುಂದಿನ ದಿನಗಳಲ್ಲಿ ಸಮುದಾಯದ ಏಳಿಗೆಗಾಗಿ ವಿಚಾರ ಸಂಕಿರಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿ-ಯುವಜನ ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಸಾಮಾಜಿಕ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲು ಸಂಘಟನೆ ರೂಪುರೇಷೆ ಸಿದ್ಧಪಡಿಸುತ್ತಿದೆ.
ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ
ಇಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಛಲವಾದಿ ಸಂಗಮದ ರಾಜ್ಯಾಧ್ಯಕ್ಷರಾದ ಶ್ರೀ ನವೀನ್ ಮಾನ್ಯ ಅವರು ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪಟಾಪಟ್ ಶ್ರೀನಿವಾಸ್, ನಿವೃತ್ತ ಕಾರ್ಯದರ್ಶಿಗಳಾದ ಶ್ರೀ ರುದ್ರಯ್ಯ ಹಾಗೂ ನಾರಾಯಣಸ್ವಾಮಿ ಸೇರಿದಂತೆ ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಮುದಾಯದ ಹಕ್ಕುಗಳು, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಬದ್ಧ ಆಶಯಗಳ ರಕ್ಷಣೆಯ ನಿಟ್ಟಿನಲ್ಲಿ ಸಂಘಟನೆಯೊಂದಿಗೆ ಕೈಜೋಡಿಸುವಂತೆ ನಾಡಿನ ಜನತೆ ಹಾಗೂ ಛಲವಾದಿ ಸಮುದಾಯದ ಬಾಂಧವರಿಗೆ ಸಂಘಟನೆಯ ಮುಖಂಡರು ಮನವಿ ಮಾಡಿದರು.