Full site
Government

ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಡಿ ₹45,254 ಕೋಟಿ ಹಂಚಿಕೆ

ಸೆ.15ರಿಂದ ಯುವ ಸಂಸತ್ತು ಕಾರ್ಯಕ್ರಮ; ನ.26ರಂದು ರಾಜ್ಯಮಟ್ಟದ ಸಭೆಯಲ್ಲಿ 224 ವಿದ್ಯಾರ್ಥಿಗಳು ಭಾಗಿ

3 min readಕರ್ನಾಟಕ

ಬೆಂಗಳೂರು: 2026–27ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ ಅಡಿಯಲ್ಲಿ ₹32,177 ಕೋಟಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ₹13,077 ಕೋಟಿ ಸೇರಿದಂತೆ ಒಟ್ಟು ₹45,254 ಕೋಟಿಯನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸಾಲಿಗೆ ಹೋಲಿಸಿದರೆ ಈ ಬಾರಿ ₹2,751 ಕೋಟಿ ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಂಧನ, ಕಂದಾಯ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆಹಾರ, ಆರೋಗ್ಯ, ಶಾಲಾ ಶಿಕ್ಷಣ, ವಸತಿ ಹಾಗೂ ಯೋಜನೆ ಸೇರಿದಂತೆ 10 ಇಲಾಖೆಗಳ ಯೋಜನೆಗಳಿಗೆ ₹32,328 ಕೋಟಿ ಹಂಚಿಕೆ ಮಾಡಲಾಗಿದೆ. ಇದು ಎಸ್‌ಸಿಎಸ್‌ಪಿ/ಟಿಎಸ್‌ಪಿ ಒಟ್ಟು ಹಂಚಿಕೆಯ ಶೇ.75ರಷ್ಟಾಗಿದೆ ಎಂದು ತಿಳಿಸಿದರು.

ಹಿಂದಿನ ಸಾಲಿನ ಅನುದಾನ ಬಳಕೆ

2025–26ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ ಅಡಿಯಲ್ಲಿ ₹30,649 ಕೋಟಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ₹11,854 ಕೋಟಿ ಸೇರಿದಂತೆ ಒಟ್ಟು ₹42,503 ಕೋಟಿಯನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಎಸ್‌ಸಿಎಸ್‌ಪಿ ಅಡಿಯಲ್ಲಿ ₹28,630 ಕೋಟಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ₹10,927 ಕೋಟಿ ಸೇರಿದಂತೆ ಒಟ್ಟು ₹39,557 ಕೋಟಿ ವೆಚ್ಚವಾಗಿದೆ.

ಕೆಲವು ಇಲಾಖೆಗಳಿಗೆ ಅನುದಾನ ಬಿಡುಗಡೆಯಾಗಿದ್ದರೂ ₹104.56 ಕೋಟಿ ವೆಚ್ಚವಾಗಿಲ್ಲ. ಕಾಯ್ದೆಯನ್ವಯ ಬಳಕೆಯಾಗದ ಅನುದಾನವನ್ನು 2027–28ನೇ ಸಾಲಿಗೆ ಮರುಹಂಚಿಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಮುಖ್ಯವಾಗಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ₹2,841 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಬಿಡುಗಡೆಯಾಗಿರುವ ಹಣವನ್ನು ಸಮರ್ಪಕವಾಗಿ ವೆಚ್ಚ ಮಾಡಿ, ಹಣ ಬಳಕೆ ಪ್ರಮಾಣಪತ್ರ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದಿಂದ ಬಾಕಿ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಎಸ್‌ಸಿಎಸ್‌ಪಿ–ಟಿಎಸ್‌ಪಿ ಅನುದಾನವನ್ನು ಎಸ್‌ಸಿ/ಎಸ್‌ಟಿ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ವೆಚ್ಚ ಮಾಡಬೇಕು. ವೆಚ್ಚ ಮಾಡಿರುವ ಅನುದಾನಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ನಿಖರ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಅನುದಾನ ಹಂಚಿಕೆ ಪರಿಶೀಲನೆ

ಕೆಲವು ಇಲಾಖೆಗಳಿಗೆ ಅಗತ್ಯಕ್ಕಿಂತ ಹೆಚ್ಚಿನ ಅನುದಾನ ನೀಡಿರುವುದು ಕಂಡುಬಂದಿದ್ದು, ಉಳಿಕೆಯಾಗುವ ಅನುದಾನವನ್ನು ಪರಿಶೀಲಿಸಿ ಬೇಡಿಕೆ ಇರುವ ಇಲಾಖೆಗಳ ಯೋಜನೆಗಳಿಗೆ ಹಂಚಿಕೆ ಮಾಡುವಂತೆ ಆರ್ಥಿಕ ಇಲಾಖೆಗೆ ತಿಳಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಗೆ ₹5,430 ಕೋಟಿ ಹಾಗೂ ಪರಿಶಿಷ್ಟ ಪಂಗಡ ಇಲಾಖೆಗೆ ₹2,242.95 ಕೋಟಿ ಹಂಚಿಕೆಯಾಗಿದ್ದು, ಇದು ಎರಡೂ ಇಲಾಖೆಗಳ ಒಟ್ಟು ಹಂಚಿಕೆಯ ಶೇ.17ರಷ್ಟಾಗಿದೆ. ಈ ಅನುದಾನವನ್ನು ಹೆಚ್ಚಿಸುವಂತೆ ಆರ್ಥಿಕ ಇಲಾಖೆಗೆ ತಿಳಿಸಲಾಗಿದೆ ಎಂದು ಮುನಿಯಪ್ಪ ಹೇಳಿದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ 2013ರ ಕಲಂ 8ರ ಪ್ರಕಾರ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೋಡಲ್ ಏಜೆನ್ಸಿ ಸಭೆಯ ಶಿಫಾರಸುಗಳಂತೆ ಅನುದಾನ ಹಂಚಿಕೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಲಾಗಿದೆ.

ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಅನುದಾನ ನೈಜ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅನುದಾನದ ಬಳಕೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜೀವನಮಟ್ಟದಲ್ಲಿ ಆಗಿರುವ ಸುಧಾರಣೆಯ ಕುರಿತು ಮೌಲ್ಯಮಾಪನ ನಡೆಸಬೇಕು ಎಂದು ಸೂಚಿಸಲಾಗಿದೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾರ್ಯಕ್ರಮಗಳ ಕುರಿತು ಒಟ್ಟು 70 ಮೌಲ್ಯಮಾಪನ ಹಾಗೂ ಸಾಮಾಜಿಕ ಪರಿಶೋಧನೆಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 27 ಪೂರ್ಣಗೊಂಡಿದ್ದು, 43 ಪ್ರಗತಿಯಲ್ಲಿವೆ. ಐಎಸ್‌ಇಸಿ, ಪಬ್ಲಿಕ್ ಅಫೇರ್ಸ್ ಸೆಂಟರ್, ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ, ಕೃಷಿ ವಿಶ್ವವಿದ್ಯಾಲಯ, ತೋಟಗಾರಿಕೆ ವಿಶ್ವವಿದ್ಯಾಲಯ, ಕ್ರೈಸ್ಟ್ ವಿಶ್ವವಿದ್ಯಾಲಯ, ಐಐಡಿಎಸ್ ದೆಹಲಿ ಹಾಗೂ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ಮೂಲಕ ಈ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸೆ.15ರಂದು ಪ್ರಜಾಪ್ರಭುತ್ವ ದಿನಾಚರಣೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 2007ರ ಘೋಷಣೆಯಂತೆ ಪ್ರತಿವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ. ಕರ್ನಾಟಕದಲ್ಲಿಯೂ ‘ಪ್ರಜೆಗಳೇ ಪ್ರಭುಗಳು’ ಎಂಬ ಆಶಯದೊಂದಿಗೆ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವ ಪ್ರತಿಜ್ಞೆಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸೆ.15ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅದೇ ದಿನ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.

ನ.26ರಂದು 224 ವಿದ್ಯಾರ್ಥಿಗಳ ಯುವ ಸಂಸತ್ತು

ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಯುವ ಸಂಸತ್ತು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಸೆ.16ರಿಂದ ಅ.10ರವರೆಗೆ ತಾಲ್ಲೂಕು ಮಟ್ಟದ ಯುವ ಸಂಸತ್ತು ನಡೆಯಲಿದೆ. ಅ.11ರಿಂದ ಅ.30ರವರೆಗೆ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಯಾಗಲಿದ್ದಾರೆ.

ನ.26ರಂದು ಸಂವಿಧಾನ ದಿನಾಚರಣೆಯಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಯುವ ಸಂಸತ್ತು ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯಂತೆ ಒಟ್ಟು 224 ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳ ಆಯ್ಕೆಯನ್ನು ಸ್ಥಳೀಯ ಶಾಸಕರ ನೇತೃತ್ವದ ಸಮಿತಿ ನಿಗದಿತ ಮಾನದಂಡಗಳ ಆಧಾರದ ಮೇಲೆ ನಡೆಸಲಿದೆ. ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಸೆ.10ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸಲಹೆ, ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ನಿಗಮಗಳ ಅಧಿಕಾರಿಗಳು, ಸಮುದಾಯದ ಮುಖಂಡರ ಸಭೆ

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರ ಸ್ವೀಕರಿಸಿದ ನಂತರ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೋವಿ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮಗಳ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ ಎಂದು ಮುನಿಯಪ್ಪ ಹೇಳಿದರು.

ಸಭೆಯಲ್ಲಿ ನಿಗಮಗಳ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಪರಿಶಿಷ್ಟ ಜಾತಿಯ ನೂರೊಂದು ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಇಲಾಖೆಯಿಂದ ಸಮರ್ಪಕ ಅನುದಾನ ಬಿಡುಗಡೆ ಮಾಡಿ ಸಮುದಾಯದ ಅಭಿವೃದ್ಧಿಗೆ ಬದ್ಧನಾಗಿರುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್, ಆಯುಕ್ತ ರಾಕೇಶ್ ಕುಮಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಆಗಾ ಸುಲ್ತಾನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Read the full story on Anukshana