Full site
Books & Literature

ನವೆಂಬರ್‌ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಶೇ. 50ರ ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳಾದ್ಯಂತ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳು ಶೇ. 50ರ ರಿಯಾಯಿತಿ ದರದಲ್ಲಿ ಲಭ್ಯವಾಗಲಿದ್ದು, ರಾಜ್ಯದ ಪುಸ್ತಕ ಮಳಿಗೆಗಳು ಹಾಗೂ ಆನ್‌ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

By Anukshana News Desk1 min read

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಪುಸ್ತಕ ಪ್ರಿಯರಿಗೆ ವಿಶೇಷ ಕೊಡುಗೆ ಘೋಷಿಸಿದೆ. 2026ರ ನವೆಂಬರ್‌ ತಿಂಗಳಾದ್ಯಂತ ಪ್ರಾಧಿಕಾರದಿಂದ ಪ್ರಕಟಿಸಲಾದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಬೆಂಗಳೂರಿನ ಕನ್ನಡ ಭವನದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆ, ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಆರಂಭಿಸಲಾದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ಲಭ್ಯವಿರಲಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯನ್ನು 080-22107705 ಸಂಖ್ಯೆಯ ಮೂಲಕ ಸಂಪರ್ಕಿಸಬಹುದು. ಅಲ್ಲದೆ, ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kpp.karnataka.gov.in ನಲ್ಲಿರುವ ಆನ್‌ಲೈನ್ ಪುಸ್ತಕ ಖರೀದಿ ವಿಭಾಗದ ಮೂಲಕವೂ ಶೇ. 50ರ ರಿಯಾಯಿತಿಯಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರವು ವ್ಯಕ್ತಿಚಿತ್ರಣ, ನಾಟಕ, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಸೇರಿದಂತೆ ವಿವಿಧ ಪ್ರಕಾರಗಳ ಮೌಲಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದೆ.

ಪ್ರಾಜ್ಞರು ಹಾಗೂ ವಿದ್ವಾಂಸರು ರಚಿಸಿರುವ ಇಂತಹ ಮಹತ್ವದ ಕೃತಿಗಳನ್ನು ಜನಸಾಮಾನ್ಯರಿಗೆ ಕೈಗೆಟುಕುವ ಬೆಲೆಯಲ್ಲಿ ತಲುಪಿಸುವ ಉದ್ದೇಶದಿಂದ ಈ ವಿಶೇಷ ರಿಯಾಯಿತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಕನ್ನಡ ಪುಸ್ತಕ ಪ್ರಿಯರು ಹಾಗೂ ಓದುಗರು ಈ ವಿಶೇಷ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಾಧಿಕಾರ ಮನವಿ ಮಾಡಿದೆ.

Read the full story on Anukshana