Full site
Greater Bengaluru Authority GBA

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಆತಂಕ ಬೇಡ

ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ನಮೂನೆ–6ರ ಮೂಲಕ ಅರ್ಜಿ ಸಲ್ಲಿಸಬಹುದು. ಬೆಂಗಳೂರು ನಗರದಲ್ಲಿ 2.19 ಲಕ್ಷ ಅರ್ಜಿಗಳು ಬಂದಿದ್ದು, ಪರಿಶೀಲನೆ ಬಳಿಕ ಒಟ್ಟು ಮತದಾರರ ಸಂಖ್ಯೆ ಸುಮಾರು 59 ಲಕ್ಷಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.

By Anukshana News Desk2 min read

ಬೆಂಗಳೂರು, ಅ.15: ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಅರ್ಹ ಮತದಾರರು ಆತಂಕಪಡುವ ಅಗತ್ಯವಿಲ್ಲ. ಅರ್ಹ ಮತದಾರರ ಹೆಸರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ಚುನಾವಣಾ ಆಯೋಗ ವಿಶೇಷ ಅಭಿಯಾನ ಕೈಗೊಳ್ಳಲಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಭಾಂಗಣ–1ರಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹರು ನಮೂನೆ–6ರ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಪ್ರಸ್ತುತ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 56,99,660 ಮತದಾರರಿದ್ದಾರೆ. 2002ರ ಮತದಾರರ ಪಟ್ಟಿಯಲ್ಲಿ ಹೆಸರು ಪತ್ತೆಯಾಗದಿರುವುದು ಹಾಗೂ ಇತರ ವ್ಯತ್ಯಾಸಗಳ ಕಾರಣದಿಂದ 24,06,044 ಮಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಾಗಿತ್ತು. ಈ ಪೈಕಿ ಬಹುತೇಕ ವಿಚಾರಣೆಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಅವರು ಹೇಳಿದರು.

ಮತದಾರರನ್ನು ವಿಚಾರಣೆಗಾಗಿ ಕಚೇರಿಗೆ ಕರೆಯುವ ಬದಲು, ಬೂತ್ ಮಟ್ಟದ ಅಧಿಕಾರಿಗಳು (BLO) ನೇರವಾಗಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಭಾರತದ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಹೇಶ್ವರ್ ರಾವ್ ತಿಳಿಸಿದರು.

59 ಲಕ್ಷಕ್ಕೆ ತಲುಪುವ ನಿರೀಕ್ಷೆ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು 2.19 ಲಕ್ಷ ಮಂದಿ ನಮೂನೆ–6 ಸಲ್ಲಿಸಿದ್ದಾರೆ. ನಮೂನೆ–7 ಮತ್ತು ನಮೂನೆ–8 ಸೇರಿದಂತೆ ವಿವಿಧ ಅರ್ಜಿಗಳ ವಿಲೇವಾರಿ ಹಾಗೂ ಪರಿಶೀಲನೆಯ ಬಳಿಕ ಸುಮಾರು 2 ಲಕ್ಷ ಮತದಾರರು ಹೊಸದಾಗಿ ಸೇರ್ಪಡೆಯಾಗುವ ನಿರೀಕ್ಷೆಯಿದೆ.

ಇದರಿಂದ ಬೆಂಗಳೂರು ನಗರದಲ್ಲಿನ ಒಟ್ಟು ಮತದಾರರ ಸಂಖ್ಯೆ ಸುಮಾರು 59 ಲಕ್ಷಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

ನಮೂನೆ–7ರ ಶೇ.44 ಅರ್ಜಿಗಳ ವಿಲೇವಾರಿ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ನಮೂನೆ–7ರ ಅಡಿಯಲ್ಲಿ ಒಟ್ಟು 5,549 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಈವರೆಗೆ 2,468 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ. ಇದು ಒಟ್ಟು ಅರ್ಜಿಗಳ ಶೇ.44ರಷ್ಟಾಗಿದೆ ಎಂದು ಮಹೇಶ್ವರ್ ರಾವ್ ಮಾಹಿತಿ ನೀಡಿದರು.

ಬೂತ್ ಮಟ್ಟದ ಏಜೆಂಟ್‌ಗಳಿಗೆ (BLA) ನಮೂನೆ–7ರ ಅಡಿಯಲ್ಲಿ ಗರಿಷ್ಠ 10 ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಈ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದರೆ ಅವುಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂಬಂಧ ಮಲ್ಲೇಶ್ವರಂನಲ್ಲಿ ಸಲ್ಲಿಕೆಯಾಗಿದ್ದ 1,103 ನಮೂನೆ–7 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇತರೆ ಪ್ರದೇಶಗಳಲ್ಲಿ ಸಲ್ಲಿಕೆಯಾಗಿರುವ ಸಾಮೂಹಿಕ ಅರ್ಜಿಗಳನ್ನೂ ಪರಿಶೀಲಿಸಲಾಗುತ್ತಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯ

ವಿಧಾನಸಭಾ ಕ್ಷೇತ್ರವಾರು ಸ್ವೀಕೃತವಾಗಿರುವ ಹಕ್ಕು ಮತ್ತು ಆಕ್ಷೇಪಣೆಗಳ ಮಾಹಿತಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ನಮೂನೆ–9, 10, 11, 11ಎ ಮತ್ತು 11ಬಿ ಸೇರಿದಂತೆ ಸಂಬಂಧಿತ ನಮೂನೆಗಳ ವಿವರಗಳೊಂದಿಗೆ ಚುನಾವಣಾ ಆಯೋಗದ ವೆಬ್‌ಸೈಟ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್:

https://voters.eci.gov.in/

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವೆಬ್‌ಸೈಟ್:

https://bbmp.gov.in/home

ಎಸ್‌ಐಆರ್ ವೇಳಾಪಟ್ಟಿ

  • ಕರಡು ಮತದಾರರ ಪಟ್ಟಿ ಪ್ರಕಟಣೆ: 24.08.2026
  • ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: 24.08.2026ರಿಂದ 23.09.2026ರವರೆಗೆ
  • ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳ ವಿಲೇವಾರಿ: 24.08.2026ರಿಂದ 22.10.2026ರವರೆಗೆ
  • ಅಂತಿಮ ಮತದಾರರ ಪಟ್ಟಿ ಪ್ರಕಟಣೆ: 27.10.2026

ಸಭೆಯಲ್ಲಿ ವಿಶೇಷ ಆಯುಕ್ತ ಶಿಲ್ಪಾ ನಾಗ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್. ಹಾಗೂ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಜಗದೀಶ್ ನಾಯ್ಕ್, ಜಂಟಿ ಆಯುಕ್ತರು, ಸಹಾಯಕ ಆಯುಕ್ತರು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Read the full story on Anukshana