ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸುವ “ನಮ್ಮಭಿಮಾನದ ಅಭಿನಂದನೆ” ಕಾರ್ಯಕ್ರಮವನ್ನು ಜುಲೈ 11ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ (ಗೇಟ್ ನಂ.2)ಯಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.
ಬುಧವಾರ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.
ರಾಜ್ಯದ ನೂತನ ಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸುವ ಸಂಪ್ರದಾಯವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಲವು ವರ್ಷಗಳಿಂದ ಪಾಲಿಸಿಕೊಂಡು ಬಂದಿದೆ. ಅದೇ ಸಂಪ್ರದಾಯದಂತೆ ಈ ಬಾರಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲನಂದನಾಥ ಮಹಾಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಅಧ್ಯಕ್ಷ ಪರಮಪೂಜ್ಯ ಶ್ರೀಶ್ರೀಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಐಎಎಸ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಅಭಿನಂದನಾ ಸಮಾರಂಭದ ಬಳಿಕ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ 10 ಜಿಲ್ಲೆಗಳ ಸುಮಾರು 3,000 ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.
ಈ ವರ್ಷದ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 11,000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಳೆದ ಹಲವು ವರ್ಷಗಳಲ್ಲಿ ಸಂಘದಿಂದ 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದೆ ಎಂದು ಷಡಾಕ್ಷರಿ ತಿಳಿಸಿದರು.
25 ಸಾವಿರಕ್ಕೂ ಹೆಚ್ಚು ಜನರ ಭಾಗವಹಿಸುವಿಕೆ
ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲ್ಲೂಕು ಶಾಖೆಗಳ ಪದಾಧಿಕಾರಿಗಳು, ಸರ್ಕಾರಿ ನೌಕರರು, ಪ್ರತಿಭಾ ಪುರಸ್ಕಾರ ಸ್ವೀಕರಿಸುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸೇರಿ ಸುಮಾರು 25 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸುವವರಿಗೆ ಮಧ್ಯಾಹ್ನದ ಊಟ ಹಾಗೂ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗೆ ಪ್ರಮುಖ ಬೇಡಿಕೆಗಳ ಮನವಿ
ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ:
ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸುವುದು.
ಕೇಂದ್ರ ಸರ್ಕಾರಿ ನೌಕರರಿಗೆ ದೊರೆಯುವ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸುವುದು.
ಸೇರಿದಂತೆ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಮಾಡಲಾಗುವುದು ಎಂದು ಹೇಳಿದರು.
ಎಸ್‌ಐಆರ್ ಸಮೀಕ್ಷೆ: ನೌಕರರ ಮೇಲಿನ ಒತ್ತಡ ಕಡಿಮೆ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಸಮೀಕ್ಷಾ ಕಾರ್ಯದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರನ್ನು ನಿಯೋಜಿಸಲಾಗಿದ್ದು, ಅವರು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಕಾರ್ಯನಿರ್ವಹಣೆಯ ವೇಳೆ ಸಿಬ್ಬಂದಿ ಅನಗತ್ಯ ಒತ್ತಡ, ಸುರಕ್ಷತೆ ಹಾಗೂ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಷಡಾಕ್ಷರಿ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಸಂಘವು ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಕೆಳಕಂಡಂತೆ ಮನವಿ ಮಾಡಿದೆ:
ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯಗಡುವನ್ನು ನಿಗದಿಪಡಿಸಿ ಸಿಬ್ಬಂದಿಯ ಮೇಲಿನ ಅನಗತ್ಯ ಒತ್ತಡ ತಪ್ಪಿಸಬೇಕು.
ಸಮೀಕ್ಷಾ ಕಾರ್ಯದಲ್ಲಿ ಅನಧಿಕೃತ ವ್ಯಕ್ತಿಗಳು ಅಥವಾ ಸಂಘಟನೆಗಳ ಹಸ್ತಕ್ಷೇಪವನ್ನು ಕಟ್ಟುನಿಟ್ಟಾಗಿ ತಡೆಯಬೇಕು ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
ಬಿ.ಎಲ್.ಒ. ಹಾಗೂ ಇತರ ಸಿಬ್ಬಂದಿಯ ಸಭೆಗಳನ್ನು ಕಚೇರಿ ವೇಳೆಯಲ್ಲಿಯೇ ನಡೆಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಾತ್ರಿ ವೇಳೆಯಲ್ಲಿ ಸಭೆಗಳನ್ನು ನಡೆಸಬಾರದು ಹಾಗೂ ಮಹಿಳಾ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಬೇಕು.
ಸರ್ಕಾರಿ ನೌಕರರ ಹಿತಾಸಕ್ತಿ, ಸಾರ್ವಜನಿಕ ಸೇವೆಯ ಗುಣಮಟ್ಟ ಹಾಗೂ ಚುನಾವಣಾ ಆಯೋಗದ ಕಾರ್ಯಗಳ ಸುಗಮ ಅನುಷ್ಠಾನಕ್ಕೆ ಅಗತ್ಯವಾದ ಆದೇಶಗಳನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಹಿರಿಯ ಉಪಾಧ್ಯಕ್ಷ ಮೋಹನ್ ಕುಮಾರ್, ಸೋಮಶೇಖರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.




